ಬೆಂಗಳೂರು: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೊರಡಿಸಿದ್ದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಈ ಮೇಲ್ಮನವಿಯನ್ನು ನ್ಯಾಯಮೂರ್ತಿ ಜಿ. ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು. ‘ಮಧ್ಯಂತರ ಆದೇಶದ ಪರಿಗಣನೆಗಾಗಿ ಪ್ರಕರಣವನ್ನು ಇದೇ 14ಕ್ಕೆ ಮುಂದೂಡಲಾಗುತ್ತಿದೆ. ಅಲ್ಲಿಯವರೆಗೂ ಪರೀಕ್ಷೆಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ನ್ಯಾಯಪೀಠ ತಿಳಿಸಿತು.
ಅಂತೆಯೇ, ‘ಉದ್ದೇಶಿತ ಪರೀಕ್ಷೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಮೇಲೆ ಪರಿಣಾಮವಾಗದು ಎಂಬುದನ್ನು ಸ್ಪಷ್ಟಪಡಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿ’ ಎಂದು ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿತು.
ಸುತ್ತೋಲೆ ರದ್ದುಪಡಿಸಲು ಕೋರಿ, ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸ), ಇತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ನ್ಯಾಯಪೀಠ ಶುಕ್ರವಾರ ಪುರಸ್ಕರಿಸಿತ್ತು.